ಬೀದರ್: ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು (ರಿ), ಧಾರವಾಡ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘ (ರಿ), ಬೀದರ್ ಇವರ ಸಂಯುಕ್ತ ಆಶ್ರಯದಲ್ಲಿ ದೇಶದ ಮೊದಲ ಮಹಿಳಾ ಶಿಕ್ಷಕಿಯರಾದ ಸಾವಿತ್ರಿಬಾಯಿ ಫೂಲೆ , ಫಾತಿಮಾ ಶೇಖ್ ಮತ್ತು ರಮಾಬಾಯಿ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.
ಈ ಸಮಾರಂಭದಲ್ಲಿ ಸಮಾಜಸೇವಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸಮಾಜಮುಖಿ ಕಾರ್ಯಗಳ ಮೂಲಕ ಜನಸಾಮಾನ್ಯರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಸೂರ್ಯಕಾಂತ ತಿಪ್ಪಣ್ಣಾ ಸಾಧೂರೆ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮಾಜದ ವಿವಿಧ ವರ್ಗಗಳ ಜನರ ಕಲ್ಯಾಣಕ್ಕಾಗಿ ಅವರು ಕೈಗೊಂಡಿರುವ ಸೇವಾ ಕಾರ್ಯಗಳನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಸಮಾಜದಲ್ಲಿ ಶಿಕ್ಷಣ, ಸಾಮಾಜಿಕ ನ್ಯಾಯ ಮತ್ತು ಸಾರ್ವಜನಿಕ ಹಿತಾಸಕ್ತಿಗಾಗಿ ಸಲ್ಲಿಸಿರುವ ಅವರ ಕೊಡುಗೆ ಶ್ಲಾಘನೀಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮವು ಬೀದರ ನಗರದ ಪ್ರತಾಪನಗರದಲ್ಲಿರುವ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯಿತು. ಈ ವೇಳೆ ಶಿಕ್ಷಕ ಸಂಘಗಳ ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದರು.
ವರದಿ: ಅರವಿಂದ ಮಲ್ಲೀಗೆ