ಮಂಗಳೂರು, ಮೇ 31: ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆ ಪ್ರಕ್ರಿಯೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್ ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆರ್. ಧರ್ಮಸೇನಾ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ನಾಯಕನಾಗಿದ್ದು, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಸಂಘಟನಾ ಚಾತುರ್ಯ, ಕ್ರಿಯಾಶೀಲತೆ ಹಾಗೂ ಪಕ್ಷದ ಸಂಘಟನೆಯಲ್ಲಿ ದೀರ್ಘಕಾಲದಿಂದ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದಲ್ಲದೆ, ಆರ್. ಧರ್ಮಸೇನಾ ಅವರು ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದು, ಪಕ್ಷದ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಅವರ ತಂದೆ ದಿವಂಗತ ಎನ್. ರಾಚಯ್ಯ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ಲೋಕಸಭಾ ಸದಸ್ಯರಾಗಿ, ಎರಡು ಬಾರಿ ವಿಧಾನಸಭಾ ಸದಸ್ಯರಾಗಿ ಹಾಗೂ ಸಚಿವರಾಗಿಯೂ ಕಾರ್ಯನಿರ್ವಹಿಸಿ ಉತ್ತಮ ರಾಜಕೀಯ ಪರಂಪರೆಯನ್ನು ನಿರ್ಮಿಸಿದ್ದರು ಎಂದು ದಿನೇಶ್ ಮುಳೂರು ಸ್ಮರಿಸಿದ್ದಾರೆ.
ಇಂತಹ ಉತ್ತಮ ರಾಜಕೀಯ ಹಿನ್ನೆಲೆ ಮತ್ತು ಸಂಘಟನಾ ಅನುಭವ ಹೊಂದಿರುವ ಕಾಂಗ್ರೆಸ್ ಕುಟುಂಬದ ಆರ್. ಧರ್ಮಸೇನಾ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ನೂತನ ಮುಖ್ಯಮಂತ್ರಿಗಳಿಗೆ ಹಾಗೂ ಪಕ್ಷದ ಹೈಕಮಾಂಡ್ಗೆ ಅವರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ವಿವಿಧ ಸಮುದಾಯಗಳು ಮತ್ತು ಸಂಘಟನೆಗಳಿಂದ ಪ್ರತಿನಿಧಿತ್ವಕ್ಕಾಗಿ ಒತ್ತಾಯಗಳು ಹೆಚ್ಚಾಗಿವೆ.