ಮಂಗಳೂರು, ಮೇ 31: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿರುವ U. T. Khader ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ಹಾಗೂ ಉನ್ನತ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಯು.ಟಿ. ಖಾದರ್ ಅವರು ತಮ್ಮ ಸುದೀರ್ಘ ರಾಜಕೀಯ ಅನುಭವ, ಆಡಳಿತಾತ್ಮಕ ಸಾಮರ್ಥ್ಯ ಹಾಗೂ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಸಾಗುವ ನಾಯಕತ್ವದಿಂದ ರಾಜ್ಯದ ಜನರ ವಿಶ್ವಾಸ ಗಳಿಸಿರುವ ಹಿರಿಯ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದ ಅಭಿವೃದ್ಧಿ, ಸಾಮಾಜಿಕ ಸೌಹಾರ್ದತೆ ಮತ್ತು ಕಾಂಗ್ರೆಸ್ ಪಕ್ಷದ ಸಂಘಟನಾ ಬಲವರ್ಧನೆಯಲ್ಲಿ ಯು.ಟಿ. ಖಾದರ್ ಅವರ ಕೊಡುಗೆ ಮಹತ್ವದ್ದಾಗಿದೆ. ವಿಶೇಷವಾಗಿ ಕರಾವಳಿ ಭಾಗ ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮುಂಬರುವ ಸಚಿವ ಸಂಪುಟ ಪುನರ್ರಚನೆ ಅಥವಾ ರಾಜಕೀಯ ನೇಮಕಾತಿಗಳ ಸಂದರ್ಭದಲ್ಲಿ ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿಯಂತಹ ಉನ್ನತ ಹುದ್ದೆ ಹಾಗೂ ಪ್ರಮುಖ ಖಾತೆಯ ಸಚಿವ ಸ್ಥಾನವನ್ನು ನೀಡುವ ಮೂಲಕ ಅವರ ಅನುಭವ ಮತ್ತು ನಾಯಕತ್ವವನ್ನು ರಾಜ್ಯದ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ದಿನೇಶ್ ಮುಳೂರು ಒತ್ತಾಯಿಸಿದ್ದಾರೆ.
ಇದು ಕೇವಲ ಕರಾವಳಿ ಭಾಗದ ಜನರ ಆಶಯ ಮಾತ್ರವಲ್ಲದೆ, ರಾಜ್ಯದ ಪ್ರಗತಿಪರ ಹಾಗೂ ಜಾತ್ಯತೀತ ಮನೋಭಾವದ ಜನರ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಪರವಾಗಿ ಈ ಆಗ್ರಹವನ್ನು ರಾಜ್ಯ ಕಾಂಗ್ರೆಸ್ ನಾಯಕತ್ವ ಮತ್ತು ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.