ಮಂಗಳೂರು: ಕರಾವಳಿಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವವಾಗಿರುವ ಮಂಗಳೂರು ದಸರಾ 2026ಕ್ಕೆ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಲಿರುವ ಈ ಬಾರಿಯ ದಸರಾ ಮಹೋತ್ಸವವನ್ನು ಅಕ್ಟೋಬರ್ 11ರಿಂದ 22ರವರೆಗೆ ಆಯೋಜಿಸಲಾಗುತ್ತಿದ್ದು, ಅಕ್ಟೋಬರ್ 12ರಂದು ಸಂಜೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಕುದ್ರೋಳಿ ಕ್ಷೇತ್ರದ ಖಜಾಂಚಿ ಹಾಗೂ ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಪೂಜಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ದಸರಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ದಸರಾ ಮಹೋತ್ಸವಕ್ಕೆ ಸಂಬಂಧಿಸಿದ ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿದ್ದು, ಈ ಬಾರಿ ಹಲವು ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಂಗಳೂರು ದಸರಾ ಮಹೋತ್ಸವದ ಅಧಿಕೃತ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ 12ರಂದು ಸಂಜೆ 6.30ಕ್ಕೆ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಜ್ಯ ಸರ್ಕಾರದ ಹಲವು ಸಚಿವರು ಕೂಡ ಭಾಗವಹಿಸುವ ನಿರೀಕ್ಷೆಯಿದೆ.
ಅಕ್ಟೋಬರ್ 11ರಂದು ವೈದಿಕ ಕಾರ್ಯಕ್ರಮಗಳು ಆರಂಭವಾಗಲಿದ್ದು, ಮಧ್ಯಾಹ್ನ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ನಡೆಯಲಿದೆ. ಅಕ್ಟೋಬರ್ 21ರಂದು ಸಂಜೆ 4 ಗಂಟೆಗೆ ಐತಿಹಾಸಿಕ ಮಂಗಳೂರು ದಸರಾ ಶೋಭಾಯಾತ್ರೆ ಆರಂಭವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಈ ಬಾರಿ ಕುದ್ರೋಳಿ ಕ್ಷೇತ್ರದ ಆವರಣದಲ್ಲಿ ವಿಶೇಷವಾಗಿ ನಿರ್ಮಿಸಿರುವ ದರ್ಬಾರ್ ಮಂಟಪ ಗಮನ ಸೆಳೆಯಲಿದೆ. ಅರಮನೆ ಮಾದರಿಯಲ್ಲಿ ವಿನ್ಯಾಸಗೊಳಿಸಿರುವ ಮಂಟಪದಲ್ಲಿ ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯರನ್ನು ಪ್ರತಿಷ್ಠಾಪಿಸಲಾಗುತ್ತದೆ.
ಕ್ಷೇತ್ರದ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ಭಜನೆ, ಸಂಗೀತ, ನೃತ್ಯ, ಕ್ರೀಡೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ಸವಕ್ಕೆ ಮತ್ತಷ್ಟು ಮೆರುಗು ನೀಡಲಿವೆ.
ಅಕ್ಟೋಬರ್ 12ರಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 8.30ಕ್ಕೆ ಚಂಡಿಕಾ ಹೋಮ ನಡೆಯಲಿದೆ. ಅಕ್ಟೋಬರ್ 17ರಂದು ವಿಶೇಷ ಸಾಮೂಹಿಕ ಚಂಡಿಕಾ ಹೋಮ ಆಯೋಜಿಸಲಾಗಿದ್ದು, ಅಂದು ಬೆಳಗ್ಗೆ 11.30ಕ್ಕೆ ಪೂರ್ಣಾಹುತಿ ನಡೆಯಲಿದೆ. ಭಕ್ತರು ಕೂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಅಕ್ಟೋಬರ್ 11ರಿಂದ 20ರವರೆಗೆ ಪ್ರತಿದಿನ ಮಧ್ಯಾಹ್ನದಿಂದ ರಾತ್ರಿ ತನಕ ‘ದಸರಾ ಕಲಾಜೆಂಕಾರ’ ಹೆಸರಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸ್ಥಳೀಯ ಕಲಾವಿದರ ಜೊತೆಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕಲಾವಿದರೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇದೇ ವೇದಿಕೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ‘ಅಸಾಮಾನ್ಯ ಸ್ತ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಮಂಗಳೂರು ದಸರಾ ಅಂಗವಾಗಿ ಮಕ್ಕಳಿಗಾಗಿ ‘ಮಕ್ಕಳ ದಸರಾ’, ಭಕ್ತಿಗೀತೆ, ಚಿತ್ರಕಲೆ ಮತ್ತು ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ‘ಮುದ್ದು ಶಾರದೆ’, ದಸರಾ ಮ್ಯಾರಥಾನ್ ಹಾಗೂ ‘ಕಿನ್ನಿಪಿಲಿ’ ಸೇರಿದಂತೆ ಹಲವು ಕಾರ್ಯಕ್ರಮಗಳೂ ನಡೆಯಲಿವೆ.