ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದಂಪತಿ ನಡುವೆ ಜಗಳ ನಡೆದಿದ್ದು, ಈ ಸಂದರ್ಭದಲ್ಲಿ ಪತಿ ಹಲ್ಲೆ ನಡೆಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಮಹಾರಾಷ್ಟ್ರ ಮೂಲದ ಸೋನಾಲಿ (30) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿಯ ಶಿವಪ್ಪ ಮಾದರ್ ಅವರ ಪುತ್ರ ಶಿವಲಿಂಗಪ್ಪ (40) ಎಂದು ಗುರುತಿಸಲಾಗಿದೆ.
ದಂಪತಿ ಮಂಗಳೂರಿನ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅಕ್ಟೋಬರ್ 12ರಂದು ಅನೈತಿಕ ಸಂಬಂಧದ ಅನುಮಾನದ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿತ್ತು ಎನ್ನಲಾಗಿದೆ.
ಜಗಳದ ವೇಳೆ ಮಾತಿಗೆ ಮಾತು ಬೆಳೆದು ಕೋಪಗೊಂಡ ಶಿವಲಿಂಗಪ್ಪ ಚಾಕುವಿನಿಂದ ಸೋನಾಲಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಬಳಿಕ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿ ಶಿವಲಿಂಗಪ್ಪನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.