ಬೆಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಗಂಭೀರ ಆರೋಪದಡಿ ಮಾಗಡಿ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ವಿಕಾಸ್, ಪ್ರಶಾಂತ್ ಮತ್ತು ಚೇತನ್ ಎಂದು ಗುರುತಿಸಲಾಗಿದೆ. ವಿಕಾಸ್ ಹಾಗೂ ಪ್ರಶಾಂತ್ ಇಬ್ಬರೂ ಬೆಂಗಳೂರಿನ ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಾಗಿದ್ದು, ಚೇತನ್ ಮಾಗಡಿ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಕೆಲಸ ಮಾಡುತ್ತಿದ್ದಾನೆ ಎನ್ನಲಾಗಿದೆ.
ಪೊಲೀಸರ ತನಿಖೆಯ ಪ್ರಕಾರ, ವಿಕಾಸ್ ಪ್ರೀತಿಯ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡು, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದನು. ಈ ಸಂದರ್ಭವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಿಕೊಂಡು, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ನಿರಂತರವಾಗಿ ಕಿರುಕುಳ ನೀಡಿದ್ದಾನೆ ಎಂಬ ಆರೋಪವಿದೆ. ಬಳಿಕ ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಜೊತೆಯಾಗಿ ವಿದ್ಯಾರ್ಥಿನಿಯನ್ನು ಚೇತನ್ ಮನೆಯಲ್ಲೇ ಸಾಮೂಹಿಕ ಅತ್ಯಾಚಾರಕ್ಕೆ ಒಳಪಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯಿಂದ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿ ಡಿಸೆಂಬರ್ 17ರಂದು ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (ಅತ್ಯಾಚಾರ), 70 (ಸಾಮೂಹಿಕ ಅತ್ಯಾಚಾರ) ಮತ್ತು 71 (ಪುನರಾವರ್ತಿತ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.