Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ಬೀದರ್: ನೀಟ್-ಯುಜಿ-2026 ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷಾ ಅಕ್ರಮ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪರೀಕ್ಷಾ ಅಕ್ರಮ ವಿರೋಧಿ ವಿಶೇಷ ಕಠಿಣ ಕಾಯ್ದೆ ಜಾರಿಗೆ ತರಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.

ಈ ಸಂಬಂಧ ಭಾಲ್ಕಿ ತಹಸೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಎಬಿವಿಪಿ ಕಾರ್ಯಕರ್ತರು, ʼದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳ ಪಾರದರ್ಶಕತೆ, ವಿಶ್ವಾಸಾರ್ಹತೆಯನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಜಿಲ್ಲಾ ಸಂಚಾಲಕ ನಾಗರಾಜ ಸುಲ್ತಾನಪುರೆ ಮಾತನಾಡಿ, ʼನೀಟ್-ಯುಜಿ-2026 ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಕುರಿತು ವಿವಿಧ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ವರ್ಷಗಳ ಕಾಲ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಇಂತಹ ಅಕ್ರಮಗಳು ದೊಡ್ಡ ಅನ್ಯಾಯವಾಗಿದ್ದು, ಪ್ರಕರಣದ ಕುರಿತು ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಸಮಗ್ರ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಬೇಕುʼ ಎಂದು ಒತ್ತಾಯಿಸಿದರು.

ʼಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ವಿಶೇಷ ಕಠಿಣ ಕಾನೂನು ಜಾರಿಗೆ ತರಬೇಕು, ನೀಟ್ ಅಕ್ರಮದಲ್ಲಿ ಭಾಗಿಯಾದವರಿಗೆ ಜೀವಾವಧಿ ಶಿಕ್ಷೆ ಅಥವಾ ದೀರ್ಘಾವಧಿಯ ಕಠಿಣ ಶಿಕ್ಷೆ ವಿಧಿಸುವಂತಹ ಕಾನೂನು ವ್ಯವಸ್ಥೆ ರೂಪಿಸಬೇಕು. ಪ್ರಶ್ನೆಪತ್ರಿಕೆ ಸೋರಿಕೆಯನ್ನು ರಾಷ್ಟ್ರದ ಭವಿಷ್ಯದ ವಿರುದ್ಧದ ಅಪರಾಧ ಎಂದು ಘೋಷಿಸಿ, ಒಬ್ಬ ವಿದ್ಯಾರ್ಥಿಯ ಕನಸು ಹಾಳು ಮಾಡಿದರೆ ದೇಶದ ಭವಿಷ್ಯ ಹಾಳು ಮಾಡಿದಂತೆಯೇ ಎಂಬ ತತ್ವದಡಿ ಸರ್ಕಾರ ಕ್ರಮ ಕೈಗೊಳ್ಳಬೇಕುʼ ಎಂದು ಒತ್ತಾಯಿಸಿದರು

ʼನಿಗದಿತ ಅವಧಿಯೊಳಗೆ ತನಿಖೆ ಪೂರ್ಣಗೊಳಿಸಿ, ಪರೀಕ್ಷಾ ಮಾಫಿಯಾ ಸೇರಿದಂತೆ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತನಿಖೆ ಪೂರ್ಣಗೊಳ್ಳುವವರೆಗೆ ಸಂಪೂರ್ಣ ಪಾರದರ್ಶಕತೆ ಕಾಪಾಡಿಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಾಸ್ತವಾಂಶಗಳನ್ನು ಬಹಿರಂಗಪಡಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ತಾಂತ್ರಿಕ ಭದ್ರತೆ, ಪ್ರಶ್ನೆಪತ್ರಿಕೆಯ ಗೌಪ್ಯತೆ ಹಾಗೂ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಯನ್ನು ಇನ್ನಷ್ಟು ಬಲಪಡಿಸಬೇಕುʼ ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿಗಳು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ವರದಿ: ಅರವಿಂದ ಮಲ್ಲೀಗೆ ಬೀದರ್ ಜಿಲ್ಲಾ

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading