ಮಂಗಳೂರು, ಜೂನ್ 9: ರಾಜ್ಯದ ಗೃಹ ಸಚಿವ Priyank Kharge ಅವರ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಹಾಗೂ ಜಾತಿ ನಿಂದನಾತ್ಮಕ ಪೋಸ್ಟ್ ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ಅವರು ನೀಡಿದ ದೂರಿನ ಆಧಾರದ ಮೇಲೆ ಉರ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
FIR ಪ್ರಕಾರ, ಜೂನ್ 7ರಂದು “ನಮ್ಮ ಕರಾವಳಿ” ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಕಟವಾದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ ವೇಳೆ ಆರೋಪಿತ ಸಂತೋಷ್ ಶೆಟ್ಟಿ ಎಂಬಾತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ, ಅವರ ಘನತೆ ಮತ್ತು ವ್ಯಕ್ತಿತ್ವಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಪರಿಶಿಷ್ಟ ಜಾತಿ ಸಮುದಾಯದ ವಿರುದ್ಧ ಜಾತಿ ನಿಂದನಾತ್ಮಕ ಪದಗಳನ್ನು ಬಳಸಿದ್ದು, ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡಿರುವ ಆರೋಪವೂ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಉರ್ವಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 353(2), 352 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ (SC/ST Prevention of Atrocities Act) ಕಲಂ 3(1)(r) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 8ರಂದು ರಾತ್ರಿ 8.20ಕ್ಕೆ ದೂರು ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಆರೋಪಿತನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಗಳ ವಿರುದ್ಧ ಅವಹೇಳನಕಾರಿ ಹಾಗೂ ಜಾತಿ ನಿಂದನಾತ್ಮಕ ಹೇಳಿಕೆಗಳನ್ನು ಪ್ರಕಟಿಸುವುದು ಗಂಭೀರ ಅಪರಾಧವಾಗಿದ್ದು, ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.